ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಮಾಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ 24ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಏಕತಾ ಸೌಧದಲ್ಲಿ ರಾಜ್ಯ ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಅಧ್ಯಕ್ಷ ಗಾದಿಯ ಚುನಾವಣೆಯಲ್ಲಿ ಜಯರಾಜ್ ಜೈನ್ರ ಈ ಅವಿರೋಧ ಆಯ್ಕೆ ಪ್ರಕ್ತಿಯೆ ನಡೆಯಿತು. ಕೆಲ ತಿಂಗಳ ಹಿಂದೆ ಅಧ್ಯಕ್ಷರಾಗಿದ್ದ ಜಯಕೀರ್ತಿ ಜೈನ್ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷಗಾದಿಯ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಇದೀಗ ಜಯರಾಜ್ ಜೈನ್ರ ಅವಿರೋಧ ಆಯ್ಕೆಯ ಮೂಲಕ ಎಲ್ಲ ಕುತೂಹಲಗಳಿಗೆ ತೆರೆ ಬಿದ್ದಿದೆ.






