ಬೆಳ್ತಂಗಡಿ: ಭ್ರಷ್ಟಾಚಾರಕ್ಕೆ ಅದರದ್ಧೇ ಆದ ಕರಾಳ ಇತಿಹಾಸವಿದೆ. ರಾಷ್ಟ್ರದ ಅಭಿವೃದ್ಧಿಗೆ ಭ್ರಷ್ಟಾಚಾರಕ್ಕೆಕಡಿವಾಣ ಹಾಕಬೇಕಾದ್ದು ತೀರಾ ಅಗತ್ಯ. ಅದಕ್ಕಾಗಿ ಸಮಾಜವನ್ನು ಜಾಗೃತಗೊಳಿಸಬೇಕಾಗಿದೆ. ಜಾಗೃತ ಸಮಾಜದಿಂದ ಮಾತ್ರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಕೆ. ನಾಗೇಶ್ ಮೂರ್ತಿ ಹೇಳಿದರು.ಅವರು ನವೆಂಬರ್ 2ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಕಂದಾಯ ಇಲಾಖೆ ಬೆಳ್ತಂಗಡಿ, ಅರಣ್ಯ ಇಲಾಖೆ ಬೆಳ್ತಂಗಡಿ, ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ, ಪೊಲೀಸ್ ಇಲಾಖೆ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಬೆಳ್ತಂಗಡಿ ಹಾಗೂ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಹಭಾಗಿತ್ವದಲ್ಲಿ ನಡೆದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಷಿಯಸ್ ಲೋಬೋರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಜೆ. ಮಹೇಶ್, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ., ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ಮಾತನಾಡಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಬೇಕಾದ ಅನಿವಾರ್ಯತೆಯ ಬಗ್ಗೆ ವಿವರಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಕೆ. ಜಿ. ಸತೀಶ್ ಪ್ರತಿಜ್ಞಾವಿಧಿ ಬೋಧಿಸಿದರು.ಹಿರಿಯ ವಕೀಲ ಅಗರ್ತ ಸುಬ್ರಹ್ಮಣ್ಯ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಹಾಯಕ ಸರಕಾರಿ ಅಭಿಯೋಜಕರಾದ ಬಿ. ಕೆ. ಕಿರಣ್ ಕುಮಾರ್ ಹಾಗೂ ದಿವ್ಯರಾಜ್, ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶಿವಕುಮಾರ್, ವೇಣೂರು ವಲಯ ಅರಣ್ಯಾಧಿಕಾರಿ ಮಹಿಮ್, ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಪವನ್ ನಾಯ್ಕ್, ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಸೌಮ್ಯಾ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ವಕೀಲರ ಸಂಘದ ಕಾರ್ಯದರ್ಶಿ ಶ್ರೀಕೃಷ್ಣ ಶೆಣೈ ಸ್ವಾಗತಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ವಂದಿಸಿದರು.






