ವಿಳಂಬವಾದರೂ ಸುಸಜ್ಜಿತ ಮಾದರಿ ಕೋವಿಡ್ ಸೆಂಟರ್ ಉದ್ಘಾಟನೆ

ವಿಳಂಬವಾದರೂ ಸುಸಜ್ಜಿತ ಮಾದರಿ ಕೋವಿಡ್ ಸೆಂಟರ್ ಉದ್ಘಾಟನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಕೊಂಚ ವಿಳಂಬವಾದರೂ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಪೂರ್ಣ ಸಹಕಾರ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಪರಿಶ್ರಮದಿಂದ ಲಾಯ್ಲದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಿದ್ಧಗೊಂಡ ಮಾದರಿ ಕೋವಿಡ್ ಕೇರ್ ಸೆಂಟರ್‌ನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೇ 5ರಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಸುಸಜ್ಜಿತವಾಗಿ ಸಿದ್ಧಗೊಂಡ ಈ ಕೋವಿಡ್ ಕೇರ್ ಸೆಂಟರ್‌ನಲ್ಲಿ ಅಡುಗೆ ಕೋಣೆ, ಸ್ನಾನಗೃಹ, ಶೌಚಾಲಯ ಸಹಿತ ಎಲ್ಲ ಮೂಲಭೂತ ಸೌಕರ್ಯಗಳಿವೆ. ಈಗಾಗಲೇ ತಾಲೂಕು ಆಡಳಿತದ ಮೂಲಕ ನಾಲ್ವರು ವೃದ್ಯರನ್ನು ನೇಮಿಸಲಾಗಿದ್ದು, ಸೋಂಕಿತರ ಸೇವೆಗಾಗಿ ನರ್ಸ್‌ಗಳು, ‘ಡಿ’ ದರ್ಜೆ ನೌಕರರು ಮಾತ್ರವಲ್ಲದೇ ಜನಜಾಗೃತಿ ವೇದಿಕೆಯ ಸಿಬ್ಬಂದಿಗಳ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರಲ್ಲದೇ; ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲು ಧರ್ಮಸ್ಥಳದ ರಜತಾದ್ರಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕಿನಲ್ಲಿ ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸರಕಾರದೊಂದಿಗೆ ಕೈಜೋಡಿಸಿ ಸಂಪೂರ್ಣ ಸಹಕಾರ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ತಾಲೂಕಿನ ಜನತೆಯ ಪರವಾಗಿ ಅಭಿವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.ಸಂಸದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾl ರಾಜೇಂದ್ರ ಕೆ. ವಿ., ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾl ಕಿಶೋರ್ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನಾವಣೆ, ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಮಹೇಶ್ ಜೆ., ನೋಡೆಲ್ ಅಧಿಕಾರಿ ಡಾl ರತ್ನಾಕರ್, ತಾಲೂಕು ಆರೋಗ್ಯಾಧಿಕಾರಿ ಡಾl ಕಲಾಮಧು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾl ವಿದ್ಯಾವತಿ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್‌ನ ಕಾರ್ಯದರ್ಶಿ ಶಿಶುಪಾಲ ಪೂವಣಿ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಅಧಿಕಾರಿ ಜನಾರ್ದನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲರೂ ಕೋವಿಡ್ ನಿಯಂತ್ರಣದ ಪ್ರಾಥಮಿಕ ನಿಯಮಗಳನ್ನು ಪಾಲಿಸಿ ಭಾಗವಹಿಸಿದ್ದು ಗಮನ ಸೆಳೆಯಿತು.

Latest News

Related Posts